ಜ್ವರದ ಲಕ್ಷಣಗಳು ಕಂಡು ಬಂದರೆ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆಯಿರಿ

Written by Malnadtimes.in

Published on:

WhatsApp Group Join Now
Telegram Group Join Now

Chikkamagaluru | ಯಾವುದೇ ರೀತಿಯ ಜ್ವರದ ಲಕ್ಷಣಗಳು ಕಂಡು ಬಂದರೆ ಜನರು ನಿರ್ಲಕ್ಷಿಸದೇ ತಕ್ಷಣ ವೈದ್ಯರನ್ನು ಸಂಪರ್ಕಿಸಿ ಚಿಕಿತ್ಸೆ ಪಡೆದುಕೊಳ್ಳುವಂತೆ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಹಾಗೂ ಹಿರಿಯ ಸಿವಿಲ್ ನ್ಯಾಯಾಧೀಶರಾದ ವಿ. ಹನುಮಂತಪ್ಪ ತಿಳಿಸಿದರು.

ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ವತಿಯಿಂದ ಇಂದು ರಾಷ್ಟ್ರೀಯ ಡೆಂಗ್ಯೂ ದಿನಾಚರಣೆ ಅಂಗವಾಗಿ ಆಯೋಜಿಸಲಾಗಿದ್ದ ಜಾಥಾ ಕಾರ್ಯಕ್ರಮಕ್ಕೆ ನಗರದ ತಾಲೂಕು ಕಚೇರಿ ಆವರಣದಲ್ಲಿ ಹಸಿರು ನಿಶಾನೆ ತೋರಿಸಿ ಮಾತನಾಡಿದರು.

ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾದಂತಹ ರೋಗಗಳು ಸೊಳ್ಳೆಗಳಿಂದ ಹೆಚ್ಚಳವಾಗದಂತೆ ನಗರ ಹಾಗೂ ಗ್ರಾಮೀಣ ಭಾಗದಲ್ಲಿ ವ್ಯಾಪಕವಾಗಿ ಸಾರ್ವಜನಿಕ ತಿಳುವಳಿಕೆ ಹಾಗೂ ಸಮೀಕ್ಷಾ ಕಾರ್ಯಗಳನ್ನು ಹಮ್ಮಿಕೊಳ್ಳಬೇಕು. ಜನರು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಸ್ವಚ್ಛವಾಗಿಟ್ಟುಕೊಂಡು ಇಂತಹ ರೋಗಗಳಿಂದ ಮುಕ್ತರಾಗಿರಬೇಕು ಎಂದು ಹೇಳಿದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಗೋಪಾಲಕೃಷ್ಣ ಮಾತನಾಡಿ, ಡೆಂಗ್ಯೂ, ಚಿಕನ್ ಗುನ್ಯಾ, ಮಲೇರಿಯಾ ಪ್ರಕರಣಗಳ ನಿಯಂತ್ರಣಕ್ಕೆ ಮನೆಗಳಿಗೆ ನೀರು ಸರಬರಾಜು ಆಗುವ ವೇಳೆಯನ್ನು ತಿಳಿದುಕೊಂಡು ನೀರು ಸರಬರಾಜು ಆಗುವ 12 ಗಂಟೆ ಮೊದಲು ನೀರು ಸಂಗ್ರಹಿಸುವ ಪರಿಕರಗಳನ್ನು ಚೆನ್ನಾಗಿ ತೊಳೆದು ಒಣ ಬಟ್ಟೆಯಿಂದ ಒರೆಸಿ ಇಡಬೇಕು 12 ಗಂಟೆಯ ನಂತರ ನೀರು ಬಂದ ಮೇಲೆ ಅವುಗಳಲ್ಲಿ ನೀರು ತುಂಬಬೇಕು ಅರ್ಧ ಬಳಸಿ ಉಳಿದ ನೀರಿನಲ್ಲಿ ಮತ್ತೆ ನೀರು ತುಂಬಬಾರದು. ಮನೆ ಸುತ್ತ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು ಮನೆಯ ಯಾವುದೇ ರೀತಿಯ ತ್ಯಾಜ್ಯ ಸಂಗ್ರಹವಾಗದಂತೆ ನೋಡಿಕೊಳ್ಳಬೇಕು ವಿಶೇಷವಾಗಿ ಪ್ಲಾಸ್ಟಿಕ್ ಬಾಟಲ್, ಎಳನೀರು ಚಿಪ್ಪು, ಟೈಯರ್ ಮುಂತಾದವುಗಳಲ್ಲಿ ನೀರು ನಿಲ್ಲದಂತೆ ಜಾಗೃತಿ ವಹಿಸಬೇಕು. ಈ ಕುರಿತು ಸಾರ್ವಜನಿಕರಲ್ಲಿ ಅರಿವು ಮೂಡಿಸಬೇಕೆಂದು ತಿಳಿಸಿದರು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಅಶ್ವಥ್ ಬಾಬು ಮಾತನಾಡಿ ಜಿಲ್ಲೆಯಲ್ಲಿ ಜೂನ್ 13 ರವರೆಗೆ 378 ಡೆಂಗ್ಯೂ ಪ್ರಕರಣಗಳು ವರದಿಯಾಗಿದ್ದು, 04 ಚಿಕನ್ ಗುನ್ಯಾ ಪ್ರಕರಣಗಳು, 01 ಮಲೇರಿಯಾ ಪ್ರಕರಣಗಳು ವರದಿಯಾಗಿದ್ದು, ಸಕಾಲದಲ್ಲಿ ಚಿಕಿತ್ಸೆ ನೀಡಿ ಗುಣಮುಖರಾಗಿದ್ದಾರೆ ಎಂದ ಅವರು, ಪ್ರತಿ ತಿಂಗಳ ಮೊದಲನೆ ಮತ್ತು ಮೂರನೆ ಶುಕ್ರವಾರ ನಗರ, ಪಟ್ಟಣ ಪ್ರದೇಶಗಳ ವಾರ್ಡ್ ಸಮೀಕ್ಷೆ ಮತ್ತು ಸೊಳ್ಳೆ ಉತ್ಪತ್ತಿ ತಾಣಗಳ ನಾಶ ಕಾರ್ಯ ಹಾಗೂ ಸಾರ್ವಜನಿಕರಲ್ಲಿ ಜಾಗೃತಿ ಮೂಡಿಸುವ ಕಾರ್ಯವನ್ನು ಆಯಾಯ ತಾಲೂಕಿನ ಪ್ರಾಥಮಿಕ ಆರೋಗ್ಯ ಕೇಂದ್ರಗಳ ಆರೋಗ್ಯ ನಿರೀಕ್ಷಣಾಧಿಕಾರಿಗಳು, ಆರೋಗ್ಯ ಸುರಕ್ಷಾಧಿಕಾರಿಗಳು, ಆಶಾ ಕಾರ್ಯಕರ್ತೆಯರು ಮಾಡುತ್ತಿದ್ದಾರೆ ಎಂದರು.

ಕಾರ್ಯಕ್ರಮದಲ್ಲಿ ಜಿಲ್ಲಾ ಶಸ್ತ್ರ ಚಿಕಿತ್ಸಕ ಡಾ. ಮೋಹನ್ ಬಾಬು, ಜಿಲ್ಲಾ ಆಯುಷ್ಯ ಅಧಿಕಾರಿ ಡಾ. ಗೀತಾ, ಡಿ.ಎಂ.ಒ ಡಾ. ಬಾಲಕೃಷ್ಣ, ಆರ್.ಸಿ.ಹೆಚ್ ಅಧಿಕಾರಿ ಡಾ. ಮಂಜುನಾಥ್, ತಾಲೂಕು ವೈದ್ಯಾಧಿಕಾರಿ ಡಾ. ಸೀಮಾ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.

Leave a Comment

error: Content is protected !!