ಶಿವಮೊಗ್ಗ : ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪವಲಯ ಅರಣ್ಯಾಧಿಕಾರಿ ಹುದ್ದೆಯ ನೇರ ನೇಮಕಾತಿಯಲ್ಲಿ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವಿಯನ್ನೇ ಕನಿಷ್ಠ ವಿದ್ಯಾರ್ಹತೆಯನ್ನಾಗಿ ಮಾಡುವ ಕುರಿತು ಕ್ರಮ ಕೈಗೊಳ್ಳಬೇಕೆಂದು ಒತ್ತಾಯಿಸಿ ಕರ್ನಾಟಕ ಅರಣ್ಯ ಶಾಸ್ತ್ರ ವಿದ್ಯಾರ್ಥಿಗಳ ಪದವೀಧರರ ಸಂಘದಿಂದ ನಗರದ ಸೈನ್ಸ್ ಮೈದಾನದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಜಿಲ್ಲಾಧಿಕಾರಿಗಳ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಲಾಯಿತು.
ವೃತ್ತಿಪರ (ಅರಣ್ಯಶಾಸ್ತ್ರ) ಪದವೀಧರರ ಸಾಮರ್ಥ್ಯ ಮತ್ತು ಅಗತ್ಯವನ್ನು ಅರಿತುಕೊಂಡ ಕರ್ನಾಟಕ ಸರ್ಕಾರವು 2003 ರಲ್ಲಿ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ಮತ್ತು ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇ.50ರಷ್ಟು ಮೀಸಲಾತಿಯನ್ನು ಒದಗಿಸಿದ ನಂತರ 2012 ರಲ್ಲಿ ವಲಯ ಅರಣ್ಯಾಧಿಕಾರಿ ಹುದ್ದೆಗೆ ಶೇ.75ರಷ್ಟು ಹೆಚ್ಚಿಸಲಾಯಿತು ಎಂದು ತಿಳಿಸಿದ್ದಾರೆ.

ಅರಣ್ಯ ಇಲಾಖೆಯಲ್ಲಿ ವಿವಿಧ ಹುದ್ದೆಗಳಾದ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ, ವಲಯ ಅರಣ್ಯಾಧಿಕಾರಿ ಮತ್ತು ಉಪ ವಲಯ ಅರಣ್ಯಾಧಿಕಾರಿ ಹುದ್ದೆಗಳಿಗೆ ಬಿ.ಎಸ್ಸಿ ಅರಣ್ಯಶಾಸ್ತ್ರ ಪದವೀಧರರನ್ನೇ ನೇರ ನೇಮಕಾತಿ ಮಾಡುವುದರ ಮೂಲಕ ಅರಣ್ಯಶಾಸ್ತ್ರದಲ್ಲಿ ವಿಷೇಶ ಪರಿಣಿತಿ ಹೊಂದಿರುವ ಪದವೀಧರರ ಜ್ಞಾನ ಮತ್ತು ಅನುಭವವನ್ನು ರಚನಾತ್ಮಕವಾಗಿ ಬಳಸಿಕೊಳ್ಳಲು ಆಗ್ರಹಿಸಿದರು.







