ರಾಷ್ಟ್ರೀಯ ಡೆಂಗೀ ದಿನ – 2024 | ಸೊಳ್ಳೆ ನಿಯಂತ್ರಣದಿಂದ ಡೆಂಗೀ ರೋಗ ತಡೆಗಟ್ಟೋಣ: ಸ್ನೇಹಲ್ ಸುಧಾಕರ ಲೋಖಂಡೆ ಕರೆ

Written by Malnadtimes.in

Updated on:

WhatsApp Group Join Now
Telegram Group Join Now

ಶಿವಮೊಗ್ಗ : ಡೆಂಗೀ ಸೋಂಕು ಹರಡುವ ಸೊಳ್ಳೆಗಳ ನಿಯಂತ್ರಣ ಮತ್ತು ಸ್ವಯಂ ರಕ್ಷಣಾ ವಿಧಾನಗಳನ್ನು ಅನುಸರಿಸುವ ಮೂಲಕ ಡೆಂಗೀ ರೋಗವನ್ನು ತಡೆಗಟ್ಟೋಣ ಎಂದು ಜಿ.ಪಂ ಸಿಇಓ ಸ್ನೇಹಲ್ ಸುಧಾಕರ ಲೋಖಂಡೆ ಕರೆ ನೀಡಿದರು.

ಜಿಲ್ಲಾಡಳಿತ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಶಿವಮೊಗ್ಗ, ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿಗಳ ಕಚೇರಿ, ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ, ಜಿಲ್ಲಾ ಒಕ್ಕಲಿಗರ ಸಂಘ, ರಾಷ್ಟ್ರೀಯ ಸೇವಾ ಯೋಜನೆ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯ ಶಿವಮೊಗ್ಗ ಇವರ ಸಹಯೋಗದೊಂದಿಗೆ ಇಂದು ನಗರದ ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದಲ್ಲಿ ಆಯೋಜಿಸಲಾಗಿದ್ದ ರಾಷ್ಟ್ರೀಯ ಡೆಂಗೀ ದಿನ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.

ಡೆಂಗೀ ಜ್ವರ ತೀವ್ರ ಸ್ಥಿತಿ ತಲುಪಿದರೆ ಗಂಭೀರವಾಗುವ ಸಂಭವ ಹೆಚ್ಚಿರುತ್ತದೆ. ಉತ್ತರ ಭಾರತದ ದೊಡ್ಡ ದೊಡ್ಡ ನಗರಗಳಲ್ಲಿ ಡೆಂಗೀ ಜ್ವರಕ್ಕೆ ಅನೇಕ ಬಡವರು ತುತ್ತಾಗಿರುವುದನ್ನು ಕಾಣಬಹುದು. ಆದ್ದರಿಂದ ಈ ಸೋಂಕನ್ನು ಗಂಭೀರವಾಗಿ ಪರಿಗಣಿಸಿ ಸೂಕ್ತ ನಿಯಂತ್ರಣಾ ಕ್ರಮಗಳನ್ನು ಅಳವಡಿಸಕೊಂಡು ಇದನ್ನು ತಡೆಗಟ್ಟಬೇಕು.

ಡೆಂಗೀ ಮತ್ತು ಇತರೆ ಕೀಟಜನ್ಯ ಸೋಂಕುಗಳ ಕುರಿತು ವ್ಯಾಪಕವಾಗಿ ಸಮಾಜದಲ್ಲಿ ಅರಿವು ಮೂಡಿಸಬೇಕು. ಆರೋಗ್ಯ ಇಲಾಖೆಯು ಇತರೆ ಇಲಾಖೆಗಳ ಸಹಯೋಗದಲ್ಲಿ ಅರಿವು ಮತ್ತು ನಿಯಂತ್ರಣ ಕ್ರಮಗಳನ್ನು ಕೈಗೊಳ್ಳುತ್ತಿದೆ. ಜನರು ಸಹಕರಿಸಬೇಕು. ಮುಖ್ಯವಾಗಿ ವಿದ್ಯಾರ್ಥಿಗಳು ಈ ಬಗ್ಗೆ ಹೆಚ್ಚಿನ ಅರಿವು ಮೂಡಿಸಬೇಕು. ಸೊಳ್ಳೆಗಳು ಆಗದಂತೆ ಮುನ್ನಚ್ಚರಿಕೆ ಕ್ರಮ ಹಾಗೂ ಸೊಳ್ಳೆ ಕಚ್ಚದಂತೆ ಸ್ವಯಂ ರಕ್ಷಣಾ ವಿಧಾನಗಳನ್ನು ಅಳವಡಿಸಿಕೊಳ್ಳಬೇಕು ಎಂದರು.

ಜಿಲ್ಲಾ ರೋಗವಾಹಕ ಆಶ್ರಿತ ರೋಗಗಳ ನಿಯಂತ್ರಣಾಧಿಕಾರಿ ಡಾ.ಗುಡುದಪ್ಪ ಕಸಬಿ ಮಾತನಾಡಿ, ಜೂನ್ ಮತ್ತು ಜುಲೈ ತಿಂಗಳಲ್ಲಿ ಡೆಂಗೀ ಮತ್ತು ಇತರೆ ಕೀಟಜನ್ಯ ಸೋಂಕುಗಳು ಹೆಚ್ಚಾಗಲಿದ್ದು ಮೇ ತಿಂಗಳಿನಲ್ಲೇ ಈ ಕುರಿತು ಅರಿವು ಮತ್ತು ನಿಯಂತ್ರಣಕ್ಕೆ ಅಗತ್ಯವಾದ ಕ್ರಮ ಸಿದ್ದತೆ ಮಾಡಿಕೊಳ್ಳಬೇಕು.

ಡೆಂಗೀ ಜ್ವರ ವೈರಸ್‍ನಿಂದ ಉಂಟಾಗುವ ಖಾಯಿಲೆ. ಇದು ಸೋಂಕು ಹೊಂದಿದ ಈಡಿಸ್ ಈಜಿಪ್ಟೆ ಸೊಳ್ಳೆಯ ಕಚ್ಚುವಿಕೆಯಿಂದ ಒಬ್ಬರಿಮದ ಒಬ್ಬರಿಗೆ ಹರಡುತ್ತದೆ. ಈ ಸೊಳ್ಳೆಗಳು ಸಾಮಾನ್ಯವಾಗಿ ಸ್ವಚ್ಚ ನೀರಿನಲ್ಲಿ ಸಂತಾನಾಭಿವೃದ್ದಿ ಮಾಡುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಮನುಷ್ಯರನ್ನು ಕಚ್ಚುತ್ತವೆ. ಆದ್ದರಿಂದ ನೀರಿನ ಶೇಖರಣೆಗಳಾದ ಸಿಮೆಂಟ್ ತೊಟ್ಟಿ, ಡ್ರಮ್ಮು, ಬ್ಯಾರೆಲ್, ಮಣ್ಣಿನ ಮಡಿಕೆ, ಉಪಯೋಗಿಸದ ಒಳಕಲ್ಲು ಮುಂದಾದ ಕಡೆ ನೀರು ನಿಲ್ಲದಂತೆ ಎಚ್ಚರಿಕೆ ವಹಿಸಬೇಕು. ಸಮುದಾಯದಲ್ಲಿ ಅರಿವು ಹೆಚ್ಚಾಗಬೇಕು ಹಾಗೂ ತೊಡಗುಕೊಳ್ಳುವಿಕೆ ಅವಶ್ಯಕವಾಗಿದೆ.

ಇದ್ದಕ್ಕಿದ್ದಂತೆ ತೀವ್ರ ಜ್ವರ, ವಿಪರೀತ ತಲೆನೋವು, ಕಣ್ಣುಗಳ ಹಿಂಭಾಗ ಓವು, ಮಾಂಸಖಂಡ ಮತ್ತು ಕೀಲುಗಳಲ್ಲಿ ವಿಪರೀತ ನೋವು ಕಾಣಿಸಿಕೊಳ್ಳುವುದು, ತೀವ್ರ ಸ್ಥಿತಿಯಲ್ಲಿ ಬಾಯಿ, ಮೂಗು ಮತ್ತು ಒಸಡುಗಳಿಂದ ರಕ್ತಸ್ರಾವ ಮತ್ತು ಚರ್ಮದ ಮೇಲೆ ಅಲ್ಲಲ್ಲಿ ರಕ್ತಸ್ರಾವದ ಗುರುತುಗಳು ಕಾಣಿಸಿಕೊಳ್ಳುವುದು ಡೆಂಗೀ ಜ್ವರದ ಲಕ್ಷಣಗಳಾಗಿವೆ.

ಡೆಂಗೀ ಸೋಂಕಿತರು ಪ್ಲೇಟ್‍ಲೆಟ್ ಸಂಖ್ಯೆ ಕಡಿತವಾಯಿತೆಂದು ಗಾಬರಿಯಾಗುವುದು ಬೇಡ. ಸರ್ಕಾರಿ ವೈದ್ಯರು ಅಥವಾ ಅರ್ಹ ವೈದ್ಯರ ಬಳಿ ಸೂಕ್ತ ಚಿಕಿತ್ಸೆ ಪಡೆದುಕೊಳ್ಳಬೇಕು.

ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ.ನಟರಾಜ್ ಮಾತನಾಡಿ, ಕಳೆದ ಇಡೀ ವರ್ಷದಲ್ಲಿ ದಾಖಲಾದಷ್ಟು ಡೆಂಗೀ ಪ್ರಕರಣಗಳು ಪ್ರಸಕ್ತ ಸಾಲಿನ ಕೇವಲ ನಾಲ್ಕೇ ತಿಂಗಳಿನಲ್ಲಿ ದಾಖಲಾಗಿದೆ. ಜನವರಿಯಿಂದ ಇಲ್ಲಿಯವರೆಗೆ 180 ಡೆಂಗಿ ಹಾಗೂ 133 ಚಿಕುನ್ ಗುನ್ಯ ಪ್ರಕರಣಗಳು ದಾಖಲಾಗಿವೆ. ಹೆಚ್ಚಿನ ತಾಪಮಾನ ಕೂಡ ಪ್ರಕರಣಗಳು ಹೆಚ್ಚಲು ಕಾರಣವಾಗಿದ್ದು, ಎಲ್ಲರೂ ಸೊಳ್ಳೆ ನಿಯಂತ್ರಣ ಕ್ರಮಗಳನ್ನು ಅನುಸರಿಸಬೇಕು. ಈಡಿಸ್ ಈಜಿಪ್ಟೆ ಸೊಳ್ಳೆಗಳು ಸ್ವಚ್ಚ ನೀರಿನಲ್ಲಿ ಉತ್ಪತ್ತಿಯಾಗುತ್ತವೆ ಹಾಗೂ ಹಗಲು ಹೊತ್ತಿನಲ್ಲಿ ಕಚ್ಚುತ್ತವೆ. ಆದ್ದರಿಂದ ಈ ಸೊಳ್ಳೆಗಳು ಆಗದಂತೆ ಹೆಚ್ಚಿನ ಗಮನ ಹರಿಸಬೇಕು. ರೋಗ ನಿಯಂತ್ರಣಕ್ಕೆ ಎಲ್ಲರೂ ಸಹಕರಿಸಬೇಕು ಎಂದರು.

ಕಾರ್ಯಕ್ರಮದಲ್ಲಿ ವಿವಿಧ ಕಾರ್ಯಕ್ರಮಗಳ ಅನುಷ್ಟಾನಾಧಿಕಾರಿಗಳಾದ ಡಾ.ನಾಗರಾಜನಾಯ್ಕ, ಡಾ.ಮಲ್ಲಪ್ಪ ಓ, ಡಾ.ಕಿರಣ್ ಎಸ್.ಕೆ, ಡಾ.ವೆಂಕಟೇಶ್, ಡಾ.ಚಂದ್ರಶೇಖರ್, ಜಿಲ್ಲಾ ಒಕ್ಕಲಿಗರ ಸಂಘದ ಅಧ್ಯಕ್ಷ ಹೆಚ್.ಬಿ.ಆದಿಮೂರ್ತಿ, ಕುವೆಂಪು ಶತಮಾನೋತ್ಸವ ಶಿಕ್ಷಣ ಮಹಾವಿದ್ಯಾಲಯದ ಪ್ರಾಂಶುಪಾಲರಾದ ಡಾ.ಮಧು ಜೆ, ರೋಟರಿ ಸಂಸ್ಥೆಯ ವಿಜಯಕುಮಾರ್ ಇತರೆ ಅಧಿಕಾರಿ, ಸಿಬ್ಬಂದಿಗಳು, ಆಶಾ ಕಾರ್ಯಕರ್ತೆಯರು, ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.

ಜಿಲ್ಲಾಧಿಕಾರಿಗಳಿಂದ ಡೆಂಗೀ ಜಾಗೃತಿ ಜಾಥಾಕ್ಕೆ ಚಾಲನೆ :
ಜಿಲ್ಲಾಡಳಿತ ಕಚೇರಿಯಿಂದ ಆಯೋಜಿಸಲಾಗಿದ್ದ ಡೆಂಗೀ ಜಾಗೃತಿ ಜಾಥಾಕ್ಕೆ ಚಾಲನೆ ನೀಡಿದ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಮಾತನಾಡಿ, ಪ್ರತಿವರ್ಷಕ್ಕಿಂತ ಈ ಬಾರಿ ಅತಿ ಹೆಚ್ಚು ಡೆಂಗಿ ಪ್ರಕರಣಗಳು ಕಂಡುಬಂದಿದೆ. ಅದರಲ್ಲೂ ಶಿವಮೊಗ್ಗ ಜಿಲ್ಲೆಯಲ್ಲಿ ಅತಿ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿದ್ದು ಆರೋಗ್ಯ ಇಲಾಖೆ ಹಾಗೂ ವಿವಿಧ ಇಲಾಖೆಗಳು ಈ ಕುರಿತಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲು ಈಗಾಗಲೇ ಸೂಚಿಸಲಾಗಿದೆ.

ಡೆಂಗೀ ರೋಗವನ್ನು ನಿಯಂತ್ರಿಸಲು ಸಾರ್ವಜನಿಕರ ಸಹಕಾರ ಅತ್ಯಗತ್ಯವಾಗಿದ್ದು ತಮ್ಮ ಸುತ್ತಮುತ್ತಲಿನ ಪರಿಸರವನ್ನು ಶುದ್ಧವಾಗಿ ಇಟ್ಟುಕೊಳ್ಳಬೇಕು, ಸೊಳ್ಳೆಗಳು ಸುಳಿಯದ ರೀತಿಯಲ್ಲಿ ಎಲ್ಲಾ ಮುನ್ನೆಚ್ಚರಿಕೆ ಕ್ರಮವನ್ನು ಕೈಗೊಳ್ಳಬೇಕು. ಪ್ರತಿಯೊಬ್ಬರೂ ಡೆಂಗಿ ಕಾಯಿಲೆ ಬಗ್ಗೆ ಎಚ್ಚರ ವಹಿಸಿ ಜನರಲ್ಲಿ ಜಾಗೃತಿ ಮೂಡಿಸುವುದು ಅಗತ್ಯವಾಗಿದೆ ಎಂದರು.

Read More

Leave a Comment

error: Content is protected !!